ಸರ್ಕಾರಿ ನೌಕರರ ವಿರುದ್ಧ ಕ್ರಿಮಿನಲ್ ಪ್ರಕರಣ ಬಾಕಿ ಇದ್ದು, ಆರೋಪ ಪಟ್ಟಿ ಸಲ್ಲಿಕೆಯಾಗದಿದ್ದರೆ ಅದು ನೌಕರರಿಗೆ ಬಡ್ತಿ ನಿರಾಕರಣೆಗೆ ಕಾರಣವಾಗದು ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಧಾರವಾಡದ ತಹಶೀಲ್ದಾರ್ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ಜಯಶ್ರೀ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್. ಆರ್. ಕೃಷ್ಣ ಕುಮಾರ್ ಮತ್ತು ಜಿ. ಬಸವರಾಜ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಅಲ್ಲದೆ, ತಮಗೆ ಬಡ್ತಿ ನೀಡುವಂತೆ ಕೋರಿ ಜಯಶ್ರೀ ಅವರು 2022ರ ಜು.5ರಂದು ಸಲ್ಲಿಸಿದ್ದ ಮನವಿ ತಿರಸ್ಕರಿಸಿ ಧಾರವಾಡ ಜಿಲ್ಲಾಧಿಕಾರಿ ನೀಡಿದ್ದ ಹಿಂಬರಹ ಮತ್ತು ಜಿಲ್ಲಾಧಿಕಾರಿಯ ಹಿಂಬರವನ್ನು ಎತ್ತಿಹಿಡಿದ ಕೆಎಟಿ ಆದೇಶವನ್ನು ಹೈಕೋರ್ಟ್ ಇದೇ ವೇಳೆ ರದ್ದುಪಡಿಸಿದೆ. ಜತೆಗೆ, ಮುಂದಿನ ಮೂರು ತಿಂಗಳ ಒಳಗೆ ಎಲ್ಲಾ ಸರ್ಕಾರಿ ಸೌಲಭ್ಯಗಳೊಂದಿಗೆ ಅರ್ಜಿದಾರರನ್ನು ಒಟ್ಟಿಗೆ ಪ್ರಥಮ ದರ್ಜೆ ಸಹಾಯಕರು ಹಾಗೂ ಕಂದಾಯ ಇನ್ಸ್ಪೆಕ್ಟ್ ಹುದ್ದೆಗೆ ಪರಿಗಣಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.